ಧರ್ಮಸ್ಥಳ ಸಂಸ್ಥೆಯಿಂದ ಪರಿಸರ ಜಾಗೃತಿ

ಈ ಸುದ್ದಿ ಹಂಚಿಕೊಳ್ಳಿ:

ವಿಜಯಪರ್ವ ಸುದ್ದಿ | ಕೊಪ್ಪಳ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ತಾಲೂಕಿನ ಕುಟಗನಹಳ್ಳಿ ಗ್ರಾಮದಲ್ಲಿ ನೂತನ ಸ್ವಸಹಾಯ ಸಂಘಗಳ ಉದ್ಘಾಟನೆ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ ಜರುಗಿತು.
ಗ್ರಾಮದ ದೇವಸ್ಥಾನದ ಆವರಣದಲ್ಲಿ ಸಸಿ ನೆಡುವ ಮೂಲಕ ಸ್ವಸಹಾಯ ಸಂಘಗಳ ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ಪರಿಸರ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಯೋಜನಾಧಿಕಾರಿ ರಘುರಾಮ್ ಅವರು ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಡೀ ರಾಜ್ಯದಲ್ಲಿ ಪ್ರತಿ ಹಳ್ಳಿಗಳಲ್ಲೂ ಸ್ವಸಹಾಯ ಸಂಘಗಳನ್ನು ಸ್ಥಾಪಿಸುವ ಮೂಲಕ ಗ್ರಾಮೀಣ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಮಹತ್ತರ ಕಾರ್ಯ ಕೈಗೊಂಡಿದೆ. ಜೊತೆಗೆ ಸಂಘಗಳ ಮೂಲಕ ಹಲವಾರು ಜನಪರ ಕಾರ್ಯಗಳನ್ನು ಮಾಡುತ್ತಿದೆ ಎಂದರು.

ಅನೇಕ ಜನಮಂಗಲ ಕಾರ್ಯಕ್ರಮದ ಅಡಿಯಲ್ಲಿ ವಿಕಲಚೇತನರಿಗೆ ಸಾಮಗ್ರಿಗಳ ವಿತರಣೆ, ನಿರ್ಗತಿಕ ಕುಟುಂಬಗಳಿಗೆ ಮಾಸಾಶನ ಹಾಗೂ ಆಹಾರ ಕಿಟ್ ವಿತರಣೆ, ಸ್ವಸಹಾಯ ಸಂಘಗಳ ಸದಸ್ಯರಿಗೆ ಆರೋಗ್ಯ ರಕ್ಷಾ ಕಾರ್ಡ್ ವಿತರಣೆಯಂತಹ ಹಲವಾರು ಕಾರ್ಯಕ್ರಮಗಳನ್ನು ಜಾರಿ ಮಾಡುವ ಮೂಲಕ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿದೆ. ಗ್ರಾಮಸ್ಥರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಗ್ರಾಮ ಪಂಚಾಯತಿ ಅಧ್ಯಕ್ಷೆ ಯಲ್ಲವ್ವ ವಾಲ್ಮೀಕಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯ ಶರಣಪ್ಪ ಕಳಸನಗೌಡರ ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕ ಮಂಜುನಾಥ ಬಾರ್ಕಿ ನಿರೂಪಿಸಿದರು. ಸೇವಾ ಪ್ರತಿನಿಧಿ ಪವಿತ್ರ ಕುಂಬಾರ ಸ್ವಾಗತಿಸಿದರು.

0
ಈ ಸುದ್ದಿ ಹಂಚಿಕೊಳ್ಳಿ:
ವೀಕ್ಷಣೆಗಳು: 161